ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ | Samarth Shamanur Files Nomination Congress Show of Strength in Davanagere South Siddaramaiah

Karnataka

oi-Manohara M

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ಈಗ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಕುಟುಂಬದ ಕುಡಿ ಸಮರ್ಥ್‌ ಶಾಮನೂರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ಈಗ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕಳೆದ ಹಲವು ವರ್ಷಗಳಿಂದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣದ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯನ್ನೇ ತಮ್ಮ ರಾಜಕೀಯ ಜೀವನದ ಆದ್ಯತೆಯಾಗಿಟ್ಟುಕೊಂಡಿದ್ದರು. ಅವರ ಅಗಲಿಕೆಯಿಂದ ಇಡೀ ಜಿಲ್ಲೆಗೆ ಅಪಾರ ನಷ್ಟವಾಗಿದೆ” ಎಂದು ಸ್ಮರಿಸಿದರು.

Samarth Shamanur

ಕ್ಷೇತ್ರದ ಅಭಿವೃದ್ದಿಗೆ ಸಹಕರಿಸಿ

“ಈ ನೋವಿನ ನಡುವೆಯೂ ಶಾಮನೂರು ಅವರು ನಡೆಸಿಕೊಂಡು ಬಂದಿರುವ ಅಭಿವೃದ್ಧಿಯ ರಥವನ್ನು ಮುಂದಕ್ಕೆ ಕೊಂಡೊಯ್ಯಬೇಕಿರುವುದು ಕ್ಷೇತ್ರದ ಜನರ ಮತ್ತು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ಮತ ನೀಡಿ ಆಶೀರ್ವದಿಸಿ. ಕ್ಷೇತ್ರದ ಅಭಿವೃದ್ಧಿಯ ನಿರಂತರತೆಗೆ ಎಲ್ಲರೂ ಸಹಕರಿಸಬೇಕು” ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರು ಮೃತಪಟ್ಟರೆ, ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಪ್ರತೀತಿಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ. ಆದ್ದರಿಂದ ಸಮರ್ಥ ಶಾಮನೂರುರವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ. ಪಕ್ಷದ ಕಾರ್ಯಕರ್ತರು ಸರ್ವಸಮ್ಮತವಾಗಿ ಆಯ್ಕೆ ಮಾಡುವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಂಡಾಯ ಅಭ್ಯರ್ಥಿಯಾಗಿರುವ ಸಾದಿಕ್ ಪೈಲ್ವಾನ್ ರವರು ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.

ವಿಜಯ ನಮ್ಮದೇ ಎಂದ ಡಿ.ಕೆ.ಶಿವಕುಮಾರ್‌

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿ “ವಿಜಯ ನಮ್ಮದೇ” ಎಂಬ ಸಂದೇಶ ರವಾನಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಹಸ್ತದ ಅಬ್ಬರ ಜೋರಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ, ಮುಂಬರುವ ಚುನಾವಣೆಯಲ್ಲಿ ನಮ್ಮ ವಿಜಯ ಖಚಿತ ಎಂದು ಘೋಷಿಸಿದರು.

ಯುವ ನಾಯಕ ಸಮರ್ಥ್ ಅವರಿಗೆ ಟಿಕೆಟ್ ನೀಡಿರುವುದು ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದೆ. ಶಾಮನೂರು ಕುಟುಂಬದ ಮೇಲಿರುವ ಗೌರವ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಲದೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಸಮರ್ಥ್ ಅವರಿಗೆ ಶುಭ ಹಾರೈಸಿ, ಪಕ್ಷದ ಸಂಘಟನೆ ಮತ್ತು ಗೆಲುವಿನ ತಂತ್ರಗಾರಿಕೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಯುವ ನಾಯಕ ಸಮರ್ಥ್ ಶಾಮನೂರು ಅವರ ನಾಮಪತ್ರ ಸಲ್ಲಿಕೆ ಕೇವಲ ಔಪಚಾರಿಕ ಪ್ರಕ್ರಿಯೆಯಾಗಿರದೆ, ಕಾಂಗ್ರೆಸ್ ಪಕ್ಷದ ಬೃಹತ್ ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಸಮರ್ಥ್ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಹಸ್ತಾಂತರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಎಸ್‌. ಮಲ್ಲಿಕಾರ್ಜುನ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಅಯೂಬ್‌ ಪೈಲ್ವಾನ್ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಮತ್ತು ಸಾವಿರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ, ಅವರ ಕುಟುಂಬದ ಕುಡಿಯಾದ ಸಮರ್ಥ್ ಅವರಿಗೆ ಟಿಕೆಟ್ ನೀಡಿರುವುದು ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಶಾಮನೂರು ಅವರ ಅಭಿವೃದ್ಧಿ ಮಂತ್ರ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಬಾರಿಯೂ ಕೈ ಹಿಡಿಯಲಿವೆ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/samarth-shamanur-files-nomination-congress-show-of-strength-in-davanagere-south-siddaramaiah-448089.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo