
Entertainment
oi-Manohara M
ಸ್ಯಾಂಡಲ್ವುಡ್ನ ಜನಪ್ರಿಯ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ಲಾರ್ಡ್’ ಚಿತ್ರಕ್ಕೆ ಕರ್ನಾಟಕ ಸರ್ಕಾರವು ತೆರಿಗೆ ವಿನಾಯಿತಿ ನೀಡಲು ಮುಂದಾಗಿದೆ. ಸಾಮಾಜಿಕ ಅಸಮಾನತೆ, ಜಾತಿಯಾಧಾರಿತ ಶೋಷಣೆ ಹಾಗೂ ಸಮಾಜದಲ್ಲಿನ ವರ್ಗಭೇದದ ವಾಸ್ತವ ಚಿತ್ರಣವನ್ನು ಒಳಗೊಂಡಿರುವ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಜನವರಿ 23ರಂದು ರಾಜ್ಯಾದ್ಯಂತ ಬಿಡುಗಡೆಯಾದ ‘ಲ್ಯಾಂಡ್ಲಾರ್ಡ್’ ಸಿನಿಮಾ ತನ್ನ ಗಂಭೀರ ವಿಷಯವಸ್ತು, ನೈಜತೆಯ ಕಥನ ಹಾಗೂ ದುನಿಯಾ ವಿಜಯ್ ಅವರ ಅಭಿನಯದ ಮೂಲಕ ಪ್ರೇಕ್ಷಕರು ಹಾಗೂ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಅಸಮಾನತೆ, ಜಾತಿ ಶೋಷಣೆ ಮತ್ತು ಶೋಷಿತ ವರ್ಗಗಳ ನೋವನ್ನು ಚಿತ್ರವು ಸ್ಪಷ್ಟವಾಗಿ ತೆರೆದಿಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸರ್ಕಾರ ಕೂಡ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ ‘ಲ್ಯಾಂಡ್ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.
ಸಿನಿಮಾ ಸಾಮಾಜಿಕ ಪರಿವರ್ತನೆಯ ಸಾಧನ
ಸಿನಿಮಾಗಳ ಸಾಮಾಜಿಕ ಪಾತ್ರದ ಕುರಿತು ಮಾತನಾಡಿದ ಸಿಎಂ, “ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನಿಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನಿಮಾ ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ” ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು… pic.twitter.com/CAlDMFY20P
— Siddaramaiah (@siddaramaiah) February 3, 2026
ಸರ್ಕಾರದ ಈ ನಿರ್ಧಾರದಿಂದ ‘ಲ್ಯಾಂಡ್ಲಾರ್ಡ್’ ಚಿತ್ರವು ಇನ್ನಷ್ಟು ಜನರನ್ನು ತಲುಪುವ ಸಾಧ್ಯತೆ ಹೆಚ್ಚಾಗಿದೆ. ತೆರಿಗೆ ವಿನಾಯಿತಿಯಿಂದ ಟಿಕೆಟ್ ದರ ಕಡಿಮೆಯಾಗುವ ನಿರೀಕ್ಷೆ ಇದ್ದು, ಸಾಮಾನ್ಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ವೀಕ್ಷಿಸಲು ಅನುಕೂಲವಾಗಲಿದೆ. ಇದರೊಂದಿಗೆ ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶವೂ ಸಾಕಾರಗೊಳ್ಳಲಿದೆ.
ಸಿಎಂ ಸಿದ್ದರಾಮಯ್ಯ ಅವರ ಈ ಘೋಷಣೆಗೆ ಚಿತ್ರರಂಗದ ವಲಯದಲ್ಲಿ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಸಾಮಾಜಿಕ ಕಳಕಳಿ ಹೊಂದಿದ ಚಿತ್ರಗಳಿಗೆ ಸರ್ಕಾರದಿಂದ ಸಿಗುತ್ತಿರುವ ಬೆಂಬಲವು ಕನ್ನಡ ಚಿತ್ರರಂಗಕ್ಕೆ ಹೊಸ ದಿಕ್ಕು ನೀಡಲಿದೆ ಎಂಬ ಅಭಿಪ್ರಾಯವನ್ನು ನಿರ್ದೇಶಕರು, ಕಲಾವಿದರು ಹಾಗೂ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
Disclaimer: This content was automatically imported from a third-party source via RSS feed. The original source is: https://kannada.oneindia.com/entertainment/landlord-movie-gets-tax-exemption-cm-siddaramaiah-backs-socially-relevant-sandalwood-cinema-442339.html. xn--babytilbehr-pgb.com does not claim ownership of this content. All rights remain with the original publisher.
